ಕರ್ನಾಟಕ ಸರ್ಕಾರವು ಹೆಣ್ಣು ಮಕ್ಕಳಿಗೆ ನೀಡುತ್ತಿರುವ ಉಚಿತ ಸಾರಿಗೆ ಸೌಲಭ್ಯದ ಮಾದರಿಯಲ್ಲಿ ಗಂಡು ಮಕ್ಕಳಿಗೂ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸುವುದಾಗಿ ಘೋಷಿಸಿರುವುದು ಅತ್ಯಂತ ಸ್ವಾಗತಾರ್ಹ ಹಾಗೂ ಮಕ್ಕಳ ಶಿಕ್ಷಣ ಹಕ್ಕಿನ(Children’s Right Education) ದೃಷ್ಟಿಯಿಂದ ಮಹತ್ವದ ನಿರ್ಧಾರವಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಅವರು ತಿಳಿಸಿದ್ದಾರೆ.
ಮಕ್ಕಳಿಗೆ ಶಿಕ್ಷಣವು ಸಂವಿಧಾನದ ವಿಧಿ 21-A ಅಡಿಯಲ್ಲಿ ಮೂಲಭೂತ ಹಕ್ಕಾಗಿದ್ದು, ಶಿಕ್ಷಣದ ಸಮಾನ ಅವಕಾಶಗಳನ್ನು ಕಲ್ಪಿಸಲು ಸುರಕ್ಷಿತ ಮತ್ತು ಕೈಗೆಟುಕುವ ಸಾರಿಗೆ ವ್ಯವಸ್ಥೆ ಅಗತ್ಯವಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳು ಹಾಗೂ ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳು ತಮ್ಮ ಶಾಲೆ ಮತ್ತು ಕಾಲೇಜುಗಳ ಪ್ರಯಾಣಕ್ಕಾಗಿ ಸಾರ್ವಜನಿಕ ಸಾರಿಗೆಯನ್ನೇ ಅವಲಂಬಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯನಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ, ಗಂಡು ಮಕ್ಕಳಿಗೂ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ವಿದ್ಯಾರ್ಥಿಗಳ ಆರ್ಥಿಕ ಹಿನ್ನೆಲೆಯಿಂದಾಗಿ ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು ಎಂಬ ಉದ್ದೇಶದಿಂದ ಈ ಶಿಫಾರಸ್ಸು ಸಲ್ಲಿಸಲಾಗಿತ್ತು.
ಸರ್ಕಾರವು ಈ ಶಿಫಾರಸ್ಸಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಇದೀಗ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ (C.M. D.K. Shivakumar)ಅವರು ಗಂಡು ಮಕ್ಕಳಿಗೂ ಉಚಿತ ಬಸ್ ಪಾಸ್ ಯೋಜನೆ ಘೋಷಿಸಿರುವುದು ಮಕ್ಕಳ ಶಿಕ್ಷಣ ಹಕ್ಕನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಿದೆ.
ಈ ಯೋಜನೆಯಿಂದ ವಿದ್ಯಾರ್ಥಿಗಳ ಮೇಲೆ ಪೋಷಕರ ಆರ್ಥಿಕ ಹೊರೆ ಕಡಿಮೆಯಾಗಲಿದೆ,
ಗ್ರಾಮೀಣ ಭಾಗದ ಮಕ್ಕಳ ಶಾಲಾ–ಕಾಲೇಜು ಹಾಜರಾತಿ ಹೆಚ್ಚಾಗಲಿದೆ, ಶಾಲೆ ಬಿಡುವ ಮಕ್ಕಳ ಸಂಖ್ಯೆ ಕಡಿಮೆಯಾಗುವ ಸಾಧ್ಯತೆ ಇದೆ, ಶಿಕ್ಷಣದಲ್ಲಿ ಸಮಾನ ಅವಕಾಶ ಕಲ್ಪಿಸಲು ಸಹಕಾರಿಯಾಗಲಿದೆ.
ಮಕ್ಕಳ ಹಕ್ಕುಗಳ ರಕ್ಷಣೆ ಕೇವಲ ಕಾನೂನು ಜವಾಬ್ದಾರಿಯಲ್ಲ, ಅದು ಸಮಾಜದ ಭವಿಷ್ಯವನ್ನು ರೂಪಿಸುವ ಹೂಡಿಕೆಯಾಗಿದೆ. ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಕರ್ನಾಟಕವು ಮಕ್ಕಳ ಸ್ನೇಹಿ ಆಡಳಿತದ ಮಾದರಿಯಾಗಲಿ ಎಂದು ಆಶಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

