ಕಾರ್ಯಕ್ರಮದ ಉದ್ಘಾಟನೆಯನ್ನು ಸನ್ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಅವರು ನೆರವೇರಿಸಲಿದ್ದು, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸನ್ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಘನ ಉಪಸ್ಥಿತರಿದ್ದು, ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ
ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಲ್ಲದೆ ರಾಜ್ಯ ಸಂಪುಟದ ಗೌರವಾನ್ವಿತ ಎಲ್ಲಾ ಸಚಿವರು, ಶಾಸಕರು ಮತ್ತು ರಾಜ್ಯ ಸಭಾ ಸದಸ್ಯರು, ಲೋಕಸಭಾ ಸದಸ್ಯರು ಹಾಗೂ ವಿಧಾನಪರಿಷತ್ತಿನ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿಗಳ ಸಂವಾದ :
ಸರ್ಕಾರದ ಪ್ರಮುಖ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಯೋಜನೆ, ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ, ಯುವನಿಧಿ ಯೋಜನೆ, ಗೃಹಜ್ಯೋತಿ ಯೋಜನೆ ಹಾಗೂ ವಿವಿಧ ಕ್ಷೇತ್ರದ ಕಾರ್ಮಿಕರನ್ನು ಒಳಗೊಂಡಂತೆ, ಸಮಾಜದ ವಿವಿಧ ವರ್ಗಗಳ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೇರವಾಗಿ ಸಂವಾದ ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಮತ್ತು ಪೌರಕಾರ್ಮಿಕರು ಭಾಗವಹಿಸಲಿದ್ದು, ರಾಜ್ಯ ಸರ್ಕಾರದ ಜನಪರ ಯೋಜನೆಗಳು ಜನರ ಜೀವನದಲ್ಲಿ ತಂದಿರುವ ಬದಲಾವಣೆಗಳು ಮತ್ತು ಅಭಿವೃದ್ಧಿ ಪಥದ ಕುರಿತು ಚರ್ಚೆ ನಡೆಯಲಿದೆ.

