ಬೆಂಗಳೂರು: ಮುಖ್ಯಮಂತ್ರಿ (Chief Minister) ಡಿ.ಕೆ. ಶಿವಕುಮಾರ್ (DK Shivakumar) ವಿರುದ್ಧ ತಮ್ಮ ಕುಟುಂಬದ ನಾಶಕ್ಕೆ ₹600 ಕೋಟಿ ಸುಪಾರಿ ನೀಡಲಾಗಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಆರೋಪಕ್ಕೆ ಸಂಬಂಧಿಸಿದ ದಾಖಲೆ ಹಾಗೂ ಸಾಕ್ಷ್ಯಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆರೋಪ ಸಾಬೀತುಪಡಿಸಲು ಸಾಧ್ಯವಾಗದಿದ್ದರೆ ಹೇಳಿಕೆಯನ್ನು ಹಿಂಪಡೆದು ಜನರಲ್ಲಿ ಕ್ಷಮೆ ಯಾಚಿಸಬೇಕು ಎಂದು ಕೆಪಿಸಿಸಿ (KPCC) ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ (S.Manohar) ಆಗ್ರಹಿಸಿದ್ದಾರೆ.
ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕುಮಾರಸ್ವಾಮಿ ಅವರ ಆರೋಪಗಳು ರಾಜಕೀಯ ಉದ್ದೇಶದಿಂದ ಕೂಡಿವೆ ಎಂದು ಟೀಕಿಸಿದ್ದಾರೆ.
ನೈಸ್, ಬಿಡದಿ ಯೋಜನೆ ಹಾಗೂ ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ನಿರಂತರ ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ, ಆರೋಪಗಳಿಗೆ ಸಂಬಂಧಿಸಿದ ನೈಜಾಂಶಗಳನ್ನು ಬಹಿರಂಗಪಡಿಸುವ ಬದಲು ರಾಜಕೀಯ ಹೇಳಿಕೆಗಳ ಮೂಲಕ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮನೋಹರ್ ದೂರಿದ್ದಾರೆ.
₹600 ಕೋಟಿ ಸುಪಾರಿ ಆರೋಪಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರ ಬಳಿ ನಿಖರ ಮಾಹಿತಿ ಇದ್ದರೆ ಅದನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು. ಅಲ್ಲದೆ, ಸಂಬಂಧಪಟ್ಟ ತನಿಖಾ ಸಂಸ್ಥೆಗಳಿಗೆ ದಾಖಲೆಗಳನ್ನು ಸಲ್ಲಿಸಿ, ಆರೋಪಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಜಾರಿ ನಿರ್ದೇಶನಾಲಯ (ಇ.ಡಿ.), ಸಿಬಿಐ, ಆದಾಯ ತೆರಿಗೆ ಇಲಾಖೆ ಹಾಗೂ ಇತರ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಗೌರವ ಹಾಗೂ ಜೆಡಿಎಸ್ ಪಕ್ಷದ ವಿಶ್ವಾಸಾರ್ಹತೆಯನ್ನು ಕಾಪಾಡಬೇಕಾದರೆ ಆರೋಪಗಳಿಗೆ ಸೂಕ್ತ ದಾಖಲೆಗಳನ್ನು ಒದಗಿಸುವ ಮೂಲಕ ಸತ್ಯಾಂಶವನ್ನು ಜನರ ಮುಂದಿಡಬೇಕು. ಮುಖ್ಯಮಂತ್ರಿಗಳ ವಿರುದ್ಧ ಆರೋಪ ಮಾಡಿರುವ ಕುಮಾರಸ್ವಾಮಿ ಅವರು ಅದನ್ನು ಸಾಬೀತುಪಡಿಸುವ ಹೊಣೆಗಾರಿಕೆಯಿಂದ ಹಿಂದೆ ಸರಿಯಬಾರದು ಎಂದು ಹೇಳಿದ್ದಾರೆ.
ಕೇಂದ್ರ ಸಚಿವ ಸ್ಥಾನದಲ್ಲಿರುವವರು ಸಾರ್ವಜನಿಕ ಜೀವನದ ನೈತಿಕತೆ ಮತ್ತು ಜವಾಬ್ದಾರಿಯನ್ನು ಪಾಲಿಸಬೇಕು. ಆಧಾರರಹಿತ ಆರೋಪಗಳ ಮೂಲಕ ಜನರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ, ದಾಖಲೆಗಳನ್ನು ಬಿಡುಗಡೆ ಮಾಡಿ ನಿಷ್ಪಕ್ಷಪಾತ ತನಿಖೆಗೆ ಸಹಕರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಸೇರಿದಂತೆ ಕಾಂಗ್ರೆಸ್ ಮುಖಂಡರಾದ ಆನಂದ್, ಕುಶಾಲ್ ಹರುವೇಗೌಡ, ಪುಟ್ಟರಾಜು ಹಾಗೂ ಸಾಯಿ ನವೀನ್ ಹೇಳಿಕೆ ನೀಡಿದ್ದಾರೆ.
‘ಮೇಕ್ ಇನ್ ಇಂಡಿಯಾ’ Make in India ಬದ್ಧತೆಗೆ ದಶಕದ ಸಂಭ್ರಮ; ರಫ್ತು ವಹಿವಾಟು ಬಲಪಡಿಸಲು ಒತ್ತು

