ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ ಯಶಸ್ವಿಯಾಗಿ ನಡೆಸೋಣ: ಸಚಿವ ಡಾ. ಅಜಯ್ ಸಿಂಗ್

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನವನ್ನು(41st State-Level Journalists’ Conference) ಯಶಸ್ವಿಯಾಗಿ ಹಾಗೂ ಅದ್ದೂರಿಯಾಗಿ ನಡೆಸಲು ಸಂಪೂರ್ಣ ಸಹಕಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್(Dr.Ajay Singh) ಭರವಸೆ ನೀಡಿದರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗವನ್ನು ಭೇಟಿಯಾದ ಸಚಿವರು, ಸಮ್ಮೇಳನದ ಸಿದ್ಧತೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಈ ಬಾರಿಯ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ರಾಯಚೂರಿನಲ್ಲಿ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯಲಿದ್ದು, ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿ ರಚಿಸಲಾಗುವುದು. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಸಮಿತಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದ 31 ಜಿಲ್ಲೆಗಳಿಂದ ಪತ್ರಕರ್ತರು ಭಾಗವಹಿಸುವ ನಿರೀಕ್ಷೆಯಿದ್ದು, ಸಮ್ಮೇಳನದ ಯಶಸ್ಸಿಗೆ ಎಲ್ಲ ಜನಪ್ರತಿನಿಧಿಗಳ ಸಹಕಾರ ಮತ್ತು ಸಹಭಾಗಿತ್ವ ಅಗತ್ಯವಾಗಿದೆ. ಹೀಗಾಗಿ ತಾವು ಸಮ್ಮೇಳನದ ನೇತೃತ್ವ ವಹಿಸಬೇಕೆಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಡಾ. ಅಜಯ್ ಸಿಂಗ್, ಈ ಹಿಂದೆ ಕಲಬುರಗಿಯಲ್ಲಿ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕಳೆದ ಬಾರಿ ಬೀದರ್‌ನಲ್ಲಿಯೂ ಉತ್ತಮ ರೀತಿಯಲ್ಲಿ ಸಮ್ಮೇಳನ ನಡೆದಿತ್ತು. ಅದೇ ಮಾದರಿಯಲ್ಲಿ ರಾಯಚೂರಿನಲ್ಲಿಯೂ ಯಾವುದೇ ಕೊರತೆಯಾಗದಂತೆ ಅದ್ದೂರಿಯಾಗಿ ಸಮ್ಮೇಳನ ಆಯೋಜಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ತಿಳಿಸಿದರು.

ಶೀಘ್ರದಲ್ಲೇ ರಾಯಚೂರಿಗೆ ಭೇಟಿ ನೀಡಿ, ಸಮ್ಮೇಳನದ ಯಶಸ್ಸಿಗೆ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಸಭೆ ನಡೆಸುವುದಾಗಿ ಭರವಸೆ ನೀಡಿದರು. ಸಮ್ಮೇಳನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸುವ ಹಿನ್ನೆಲೆಯಲ್ಲಿ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿಯೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಮ್ಮೇಳನದ ಲಾಂಛನ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಎನ್.ಎಸ್. ಭೋಸರಾಜು ಮಾತನಾಡಿ, ಸಮ್ಮೇಳನಕ್ಕೆ ಆಗಮಿಸುವ ಪತ್ರಕರ್ತರಿಗೆ ಉತ್ತಮ ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸುವುದು ಅತ್ಯಂತ ಮುಖ್ಯ. ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಮಾಡಿಕೊಳ್ಳಬೇಕು. ಈ ಹಿಂದೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ ಅನುಭವವಿದ್ದು, ಸಮ್ಮೇಳನದ ಯಶಸ್ಸಿಗೆ ಅಗತ್ಯ ಮಾರ್ಗದರ್ಶನ ಮತ್ತು ಸಹಕಾರ ನೀಡುವುದಾಗಿ ಹೇಳಿದರು.

ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಮಾತನಾಡಿ, ಸಮ್ಮೇಳನಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಈಗಾಗಲೇ ತಿಳಿಸಿದ್ದು, ಯಾವುದೇ ಜವಾಬ್ದಾರಿ ವಹಿಸಿದರೂ ಸಮರ್ಥವಾಗಿ ನಿರ್ವಹಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರಾಯಚೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆರ್. ಗುರುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಯ್ಯ ಸ್ವಾಮಿ ಕುಕುನೂರು, ರಾಜ್ಯ ಸಮಿತಿ ಸದಸ್ಯರಾದ ಬಸವರಾಜ್ ನಾಗಡದಿನ್ನಿ, ಅರವಿಂದ್ ಕುಲಕರ್ಣಿ, ಖಜಾಂಚಿ ಮಲ್ಲಿಕಾರ್ಜುನಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ಅಂತಿಮ ಹಂತಕ್ಕೆ: ಉಳಿದಿರುವ ಸಮಸ್ಯೆಗಳು ಬಹುತೇಕ ಅಮೆರಿಕದ ಕಡೆಯಲ್ಲಿವೆ – ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಹತ್ವದ ಹೇಳಿಕೆ

Hot this week

BIG NEWS : ಅಪ್ರಾಪ್ತರನ್ನು ವಶಕ್ಕೆ ಪಡೆದ ಮುಂಬೈ ಪೊಲೀಸರು!

ಮುಂಬೈನಲ್ಲಿ (Mumbai) ಸಾರ್ವಜನಿಕ ಉದ್ಯಾನವನದಲ್ಲಿ ಯುವ ಜೋಡಿಗೆ ಕಿರುಕುಳ, ಹಲ್ಲೆ ಆರೋಪ;...

Topics

BIG NEWS : ಅಪ್ರಾಪ್ತರನ್ನು ವಶಕ್ಕೆ ಪಡೆದ ಮುಂಬೈ ಪೊಲೀಸರು!

ಮುಂಬೈನಲ್ಲಿ (Mumbai) ಸಾರ್ವಜನಿಕ ಉದ್ಯಾನವನದಲ್ಲಿ ಯುವ ಜೋಡಿಗೆ ಕಿರುಕುಳ, ಹಲ್ಲೆ ಆರೋಪ;...

ಬೆಂಗಳೂರು: ರಾಜ್ಯದಲ್ಲಿ ವಿಜ್ಞಾನ ಆಧಾರಿತ ಪರಿಸರ ಪುನರುಜ್ಜೀವನ ಮತ್ತು ಪರಿಸರ ಸಾಕ್ಷರತೆಯನ್ನು...

Related Articles