ಬೆಂಗಳೂರು: ಪಶುಸಂಗೋಪನೆ (Animal Husbandry) ಹಾಗೂ ರೇಷ್ಮೆ ಸಚಿವ ಸಿ.ಪುಟ್ಟರಂಗಶೆಟ್ಟಿ (C.Puttaranga Shetty) ಅವರು ಇಂದು ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ಭೇಟಿ ನೀಡಿ, ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಇಲಾಖೆಯ ಕಾರ್ಯಚಟುವಟಿಕೆಗಳ ಕುರಿತು ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯು ರಾಜ್ಯದಲ್ಲಿ ಸ್ಥಾಪನೆಯಾದ ಮೊದಲ ಪ್ರಾಣಿ ಲಸಿಕಾ ಸಂಸ್ಥೆಯಾಗಿದ್ದು, ರಾಜ್ಯದಾದ್ಯಂತ ಇರುವ ಜಾನುವಾರುಗಳಿಗೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯ ಲಸಿಕೆಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರೋಗ ಹರಡುವುದನ್ನು ತಡೆಗಟ್ಟಲು ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು. ರೋಗ ನಿಯಂತ್ರಣಕ್ಕೆ ಅಗತ್ಯವಿರುವ ಲಸಿಕೆ, ಔಷಧೋಪಚಾರ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು. ಜಾನುವಾರುಗಳ ಆರೋಗ್ಯ ರಕ್ಷಣೆಗೆ ಯಾವುದೇ ನಿರ್ಲಕ್ಷ್ಯ ತೋರದೆ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇಲಾಖೆಯ ಆಯುಕ್ತ ಲಿಂಗರಾಜು, ಸಂಸ್ಥೆಯ ನಿರ್ದೇಶಕೆ ರತ್ನಂ, ಸಚಿವರ ಆ ಪ್ತ ಕಾರ್ಯದರ್ಶಿ ಡಾ.ರಾಜೀವ ಕೊಲೆರ, ಸೇರಿದಂತೆ ಸಭೆಯಲ್ಲಿ ಸಂಸ್ಥೆಯ ಅಧಿಕಾರಿಗಳು ಹಾಗೂ ಇಲಾಖೆಯ ಸಂಬಂಧಪಟ್ಟ ಸಿಬ್ಬಂದಿ ಉಪಸ್ಥಿತರಿದ್ದರು.
ಬಾಕ್ಸ್:
ನಗರದ ಹೆಬ್ಬಾಳದಲ್ಲಿರುವ ಉಪ ನಿರ್ದೇಶಕರು ಪಶು ಪಾಲನಾ ಮತ್ತು ಪಶು ವ್ಯದ್ಯೆಕೀಯ ಸೇವಾ ಇಲಾಖೆಗೆ ಸೇರಿದ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಸಿ ಪುಟ್ಟರಂಗಶೆಟ್ಟಿ ದಿಢೀರ್ ಭೇಟ್ಟಿ ನೀಡಿದರು.
ಈ ಸಂದರ್ಭದಲ್ಲಿ ಉಪ ನಿರ್ದೇಶಕರು ಸರಿಯಾದ ಸಮಯಕ್ಕೆ ಹಾಜರಾಗದ ಕಾರಣ ಉಪ ನಿರ್ದೇಶಕ ಡಾ. ಪರಮೇಶ್ವರ ಕೆ. ಟಿ ಅವರನ್ನು ತರಾಟೆಗೆ ತೆಗೆದುಕೊಂಡರು.
ಇನ್ನು ಮುಂದೆ ಕಚೇರಿಯ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಹಾಜರಾಗಿ ಸಾರ್ವಜನಿಕ ಸೇವೆ ಮಾಡಬೇಕೆಂದು ಸೂಚನೆ ನೀಡಿದರು.

