ಬೆಂಗಳೂರು: 2026 ನೇ ಸಾಲಿನ ಗಾಂಧಿ ಜಯಂತಿಯ ಶುಭ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ಸುಲಭವಾಗಿ ಪ್ರಯಾಣಿಸಲು ಅನುಕೂಲವಾಗುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (NWKRTC) ಬೃಹತ್ ಸಾರಿಗೆ ವ್ಯವಸ್ಥೆಯನ್ನು ಮಾಡಿದೆ. ಸಂಸ್ಥೆಯ ವ್ಯಾಪ್ತಿಗೆ ಒಳಪಡುವ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಒಟ್ಟು ಸುಮಾರು 120 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲು ನಿರ್ಧರಿಸಲಾಗಿದೆ.
ದಿನಾಂಕ 01-10-2026 (ಗುರುವಾರ) ಮತ್ತು 02-10-2026 (ಶುಕ್ರವಾರ – ಗಾಂಧಿ ಜಯಂತಿ) ಹಾಗೂ ಹಾಗೂ 03-10-2026 (ಶನಿವಾರ) ಮತ್ತು 04-10-2026 (ಭಾನುವಾರ) ಸಾರ್ವಜನಿಕ ರಜೆಗಳಿರುವುದರಿಂದ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯ ಹಾಗೂ ಅಂತರರಾಜ್ಯದ ವಿವಿಧ ಪ್ರಮುಖ ಸ್ಥಳಗಳಿಂದ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿದೆ. ಈ ದಟ್ಟಣೆಯನ್ನು ಸುಲಭವಾಗಿ ನಿರ್ವಹಿಸಲು ಹಾಗೂ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು ಬೆಂಗಳೂರಿನಿಂದ ಮತ್ತು ಇತರ ಪ್ರಮುಖ ಸ್ಥಳಗಳಿಂದ ವಿವಿಧ ಊರುಗಳಿಗೆ ತೆರಳಲು ಅಕ್ಟೋಬರ್ 1 ರಿಂದ ಅಕ್ಟೋಬರ್ 2 ರವರೆಗೆ ವಿಶೇಷ ಹೆಚ್ಚುವರಿ ಸಾರಿಗೆ ಸೌಲಭ್ಯ ಒದಗಿಸಲಾಗಿದೆ.
ಸಾರ್ವಜನಿಕ ಪ್ರಯಾಣಿಕರು ಈ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವುದರೊಂದಿಗೆ, ತಮ್ಮ ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲೇ ಪ್ರಯಾಣಿಸಬೇಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
