ಬೆಂಗಳೂರು :ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸುವ(Creating Legal awareness) ಹಾಗೂ ಉಚಿತ ಕಾನೂನು ನೆರವಿನ ಸೌಲಭ್ಯಗಳನ್ನು ಜನಸಾಮಾನ್ಯರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಮೊಬೈಲ್ ಇ-ಸೇವಾ ಬಸ್ (Mobile E-Sewa Bus – KA-01-G-7759) ಕಾರ್ಯಕ್ರಮವನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವ್ಯಾಪ್ತಿಯಲ್ಲಿ ನವೆಂಬರ್ 30 ರವರೆಗೆ ಮೊಬೈಲ್ ಇ-ಸೇವಾ ಬಸ್ ಸಂಚರಿಸಲಿದ್ದು, ಸಾರ್ವಜನಿಕರಿಗೆ ಉಚಿತ ಕಾನೂನು ನೆರವು, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ (NALSA) ವಿವಿಧ ಯೋಜನೆಗಳು, ಲೋಕ ಅದಾಲತ್, ಮಹಿಳೆಯರ ಹಕ್ಕುಗಳು, ಮಕ್ಕಳ ಹಕ್ಕುಗಳು, ಹಿರಿಯ ನಾಗರಿಕರ ಹಕ್ಕುಗಳು, ಕಾರ್ಮಿಕರ ಹಕ್ಕುಗಳು ಹಾಗೂ ಇತರೆ ಕಾನೂನು ಸಂಬಂಧಿತ ವಿಷಯಗಳ ಕುರಿತು ಮಾಹಿತಿ ಮತ್ತು ಅರಿವು ಮೂಡಿಸಲಾಗುವುದು.
ಗ್ರಾಮೀಣ ಪ್ರದೇಶಗಳು, ಹಿಂದುಳಿದ ವರ್ಗಗಳು, ಆರ್ಥಿಕವಾಗಿ ದುರ್ಬಲರಾದವರು ಹಾಗೂ ಕಾನೂನು ಸೇವೆಗಳಿಂದ ವಂಚಿತರಾಗಿರುವ ಜನರಿಗೆ ನ್ಯಾಯ ಮತ್ತು ಕಾನೂನು ನೆರವಿನ ಸೌಲಭ್ಯಗಳನ್ನು ತಲುಪಿಸುವುದು ಇದರ ಮುಖ್ಯ ಗುರಿಯಾಗಿದೆ.
2026 ರ ಡಿಸೆಂಬರ್ 12 ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ (National Lok Adalat) ಕುರಿತೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿ ಮಾಡಿಕೊಳ್ಳಬಹುದಾದ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಪರಸ್ಪರ ಒಪ್ಪಂದ ಮತ್ತು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಅವಕಾಶವನ್ನು ಸಾರ್ವಜನಿಕರು ಪಡೆದುಕೊಳ್ಳಬಹುದೆಂದು ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.ಸಮಾಜದ ಎಲ್ಲಾ ವರ್ಗದ ಜನರಿಗೆ ಕಾನೂನು ಅರಿವು ಮತ್ತು ನ್ಯಾಯದ ಸೌಲಭ್ಯಗಳನ್ನು ತಲುಪಿಸುವ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

