ಬೆಂಗಳೂರು: ವಿಶ್ವ ಪಾರ್ಶ್ವವಾಯು ದಿನಾಚರಣೆ(World Stroke Day) ಅಂಗವಾಗಿ ಕರ್ನಾಟಕ ಸ್ಟ್ರೋಕ್ ಫೌಂಡೇಶನ್, ಬೆಂಗಳೂರು ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನವೆಂಬರ್ 1ರಂದು ವಿಧಾನಸೌಧದ(Vidhana Soudha) ಭವ್ಯ ಮೆಟ್ಟಿಲುಗಳ ಬಳಿ ಪಾರ್ಶ್ವವಾಯು ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ 4.5 ಕಿ.ಮೀ. ವಾಕಥಾನ್ ಮತ್ತು ಓಟದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್ ಅವರು, ಪಾರ್ಶ್ವವಾಯು ಗಂಭೀರ ಆರೋಗ್ಯ ಸಮಸ್ಯೆಯಾಗಿದ್ದು, ಕಳೆದ 15 ವರ್ಷಗಳಲ್ಲಿ ಇದರ ಚಿಕಿತ್ಸಾ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗಳು ಸಂಭವಿಸಿವೆ. ಪಾರ್ಶ್ವವಾಯು ಸಂಭವಿಸಿದ ನಂತರದ ಪ್ರತಿಯೊಂದು ನಿಮಿಷವೂ ಅತ್ಯಂತ ಅಮೂಲ್ಯವಾಗಿರುತ್ತದೆ. ಆದ್ದರಿಂದ, ಸಾರ್ವಜನಿಕರು ಯಾವುದೇ ಸಮಯ ವ್ಯರ್ಥ ಮಾಡದೆ ಸಮೀಪದ ಸ್ಟ್ರೋಕ್ ರೆಡಿ ಆಸ್ಪತ್ರೆಗೆ ತೆರಳಿ ತಕ್ಷಣವೇ ತುರ್ತು ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಆಯೋಜಕರಾದ ಕರ್ನಾಟಕ ಸ್ಟ್ರೋಕ್ ಫೌಂಡೇಶನ್‌ನ ಕಾರ್ಯದರ್ಶಿ ಹಾಗೂ ಅಪೋಲೋ ಆಸ್ಪತ್ರೆ, ಬನ್ನೇರುಘಟ್ಟ ರಸ್ತೆಯ ನರರೋಗ ವಿಭಾಗದ ಮುಖ್ಯಸ್ಥ ಡಾ. ಸೂರ್ಯನಾರಾಯಣ ಶರ್ಮ ಅವರು ಮಾತನಾಡಿ, ಕರ್ನಾಟಕದಲ್ಲಿ ಪ್ರತಿ ವರ್ಷ ಸುಮಾರು ಒಂದು ಲಕ್ಷ ಪಾರ್ಶ್ವವಾಯು ಪ್ರಕರಣಗಳು ವರದಿಯಾಗುತ್ತಿದ್ದು, 30 ಸಾವಿರಕ್ಕೂ ಅಧಿಕ ರೋಗಿಗಳು ಈ ಸಮಸ್ಯೆಯಿಂದ ಶಾಶ್ವತ ಅಂಗವೈಕಲ್ಯಕ್ಕೆ ಒಳಗಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪಾರ್ಶ್ವವಾಯುವಿನ ಲಕ್ಷಣಗಳು, ತುರ್ತು ಚಿಕಿತ್ಸೆಯ ಮಹತ್ವ ಹಾಗೂ ಸಕಾಲಿಕ ವೈದ್ಯಕೀಯ ನೆರವಿನ ಕುರಿತು ಸರ್ಕಾರ ಮತ್ತು ವೈದ್ಯಕೀಯ ಸಂಘಟನೆಗಳು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಪಾರ್ಶ್ವವಾಯುವಿಗೆ ತುತ್ತಾಗಿ ಸೂಕ್ತ ಚಿಕಿತ್ಸೆ ಪಡೆದು ಚೇತರಿಸಿಕೊಂಡ ರೋಗಿಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಭಾರತೀಯ ಸ್ಟ್ರೋಕ್ ಅಸೋಸಿಯೇಷನ್ ಅಧ್ಯಕ್ಷ ಡಾ. ವಿಕ್ರಂ ಹುಡೇದ, ಕರ್ನಾಟಕ ಸ್ಟ್ರೋಕ್ ಫೌಂಡೇಶನ್ ಅಧ್ಯಕ್ಷ ಡಾ. ಜಿ.ಟಿ. ಸುಭಾಷ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ. ಬಿ.ಕೆ. ಮಧುಸೂಧನ್ ಸೇರಿದಂತೆ ವೈದ್ಯಕೀಯ ಕ್ಷೇತ್ರದ ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಚಿತ್ರ ಶೀರ್ಷಿಕೆ: ಕನ್ನಡ ರಾಜ್ಯೋತ್ಸವದ ಮುನ್ನಾದಿನದ ಅಂಗವಾಗಿ ಬೆಂಗಳೂರಿನ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಬಳಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಡಾ. ಸೂರ್ಯನಾರಾಯಣ ಶರ್ಮ ಅವರು ಆಯೋಜಿಸಿದ್ದ ಪಾರ್ಶ್ವವಾಯು ಜಾಗೃತಿ ಅಭಿಯಾನದ ವಾಕಥಾನ್ ಮತ್ತು ಓಟದ ಕಾರ್ಯಕ್ರಮದಲ್ಲಿ ಐದು ಪ್ರಮುಖ ಆಸ್ಪತ್ರೆಗಳ ಪ್ರತಿನಿಧಿಗಳು, ನರರೋಗ ತಜ್ಞರು, ವೈದ್ಯರು ಹಾಗೂ ಆಡಳಿತ ವೃತ್ತಿಪರರು ಸೇರಿದಂತೆ ಒಂದು ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮದ ಮೂಲಕ ಪಾರ್ಶ್ವವಾಯುವಿನ ಲಕ್ಷಣಗಳ ಗುರುತಿಸುವಿಕೆ ಹಾಗೂ ಸಕಾಲಿಕ ತುರ್ತು ಚಿಕಿತ್ಸೆಯ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

